Saturday, March 2, 2013

Nee Hinga Nodabyada nanna


ನೀ ಹಿಂಗ ನೋಡಬ್ಯಾಡ ನನ್ನ,
ನೀ ಹಿಂಗ ನೋಡಿದರ ನನ್ನ ತಿರುಗಿ ನಾ ಹ್ಯಾಂಗ ನೋಡಲೇ ನಿನ್ನ ||ಪ||

ಸಂಸಾರಸಾಗರದಾಗ, ಲೆಕ್ಕವಿರದಷ್ಟು ದುಃಖದ ಬಂಡಿ,
ನಾ ಬಲ್ಲೆ ನನಗೆ ಗೊತ್ತಿಲ್ಲದಿದ್ದರೂ, ಎಲ್ಲಿ ಆಚೆಯಾ ದಂಡಿ
...ಮಲಗಿರುವ ಕೂಸು ಮಲಗಿರಲಿ ಅಲ್ಲಿ, ಮುಂದಿನದು ದೇವರ ಚಿತ್ತ,
ನಾ ತಡಿಲಾರೆ ಅದು, ಯಾಕ ನೋಡತೀ, ಮತ್ತ ಮತ್ತ ನೀ ಇತ್ತ?

ತಂಬಲs ಹಾಕದs ತುಂಬ ಕೆಂಪು ಗಿಣಿಗಡಕ ಹಣ್ಣಿನ ಹಾಂಗ,
ಇದ್ದಂಥ ತುಟಿಯ ಬಣ್ಣೆತ್ತ ಹಾರಿತು? ಯಾವ ಗಾಳಿಗೆ, ಹೀಂಗ?
ಈ ಗದ್ದ, ಗಲ್ಲ, ಹಣಿ, ಕಣ್ಣು, ಕಂಡು, ಮಾರೀಗೆ ಮಾರಿಯ ರೀತಿ,
ಸಾವನs ತನ್ನ ಕೈ ಸವರಿತಿಲ್ಲಿ, ಬಂತೆನಗ ಇಲ್ಲದ ಭೀತಿ.

ಧಾರೀಲೆ ನೆನೆದ ಕೈಹಿಡಿದೆ ನೀನು ತಣ್ಣsಗ ಅಂತನ ತಿಳಿದು
ಬಿಡವೊಲ್ಲಿ ಇನ್ನೂನೂ ಬೂದಿ ಮುಚ್ಚಿದ ಕೆಂಡ ಇದಂತ ಹೊಳೆದು
ಮುಗಿಲನ ಕಪ್ಪರಿಸಿ ನೆಲಕ ಬಿದ್ದರ ನೆಲಕ ನೆಲ ಎಲ್ಲನ್ನs
ಆ ಗಾದಿಮಾತು ನಂಬಿ, ನಾನು ದೇವರಂತ ತಿಳಿದೆಯೇನ ನೀ ನನ್ನ

ಇಬ್ಬನಿ ತೊಳೆದರೂ ಹಾಲು ಮೆತ್ತಿದಾ ಕವಳಿಕಂಟಿಯಾ ಹಣ್ಣು
ಹೊಳೆ ಹೊಳೆವ ಹಾಂಗ ಕಣ್ಣಿರುವ, ಹೆಣ್ಣ, ಹೇಳು ನಿನ್ನವೇನ ಈ ಕಣ್ಣು?
ದಿಗಿಲಾಗಿ ಅನ್ನತದ ಜೀವ ನಿನ್ನ ಕಣ್ಣಾರೆ ಕಂಡು ಒಮ್ಮಿಗಿಲs
ಹುಣ್ಣಿಮಿ ಚಂದಿರನ ಹೆಣಾ ಬಂತೋ ಮುಗಿಲಾಗ ತೇಲತಾ ಹಗಲ!

ನಿನ್ನ ಕಣ್ಣಿನಾಗ ಕಾಲೂರಿ ಮಳೆಯು, ನಡನಡಕ ಹುಚ್ಚು ನಗಿ ಯಾಕ
ಹನಿ ಒಡೆಯಲಿಕ್ಕೆ ಬಂದಂಥ ಮೋಡ ತಡಧಾಂಗ ಗಾಳಿಯ ನೆವಕ,
ಅತ್ತರೆ ಅತ್ತು ಬಿಡು, ಹೊನಲು ಬರಲಿ, ನಕ್ಯಾಕ ಮರಸತಿ ದುಕ್ಕ?
ಎಲೆಬಡಿಸಿ ಕೆಡವು, ಬಿರಿಗಣ್ಣು ಬ್ಯಾಡ, ತುಟಿ ಕಚ್ಚಿ ಹಿಡಿಯದಿರು ಬಿಕ್ಕ.

1 comment:

  1. Amazong song.. ashwat's voice keeps on singing in your head..

    ReplyDelete